ಕಲಬುರಗಿ: ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಲ್ಯಾಪ್‍ಟಾಪ್ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಖರೀದಿಸಿ ಕಲಬುರಗಿಯ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಮ್.ಬಿ.ಬಿ.ಎಸ್. ವ್ಯಾಸಂಗ ಮಾಡುತ್ತಿರುವ ಒಟ್ಟು 151 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಮಂಗಳವಾರ ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ್ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ 146 ಪರಿಶಿಷ್ಟ ಜಾತಿ ಹಾಗೂ 5 ಜನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 151 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್, ಪ್ರಿಂಟರ್, ಬಿಪಿ ಆಪರೇಟರ್ಸ್, ಸ್ಟೇಥಸ್ಕೋಪ್, ಚಾರ್ಜೇಬಲ್ ಬ್ಯಾಟರಿ, ಮಾಸ್ಕ್, ಗ್ಲೌಸ್, ಆಫರಾನ್ ಹಾಗೂ ವೈದ್ಯಕೀಯ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಉಮೇಶ ಎಸ್.ಆರ್., ವೈದ್ಯಕೀಯ ಅಧೀಕ್ಷಕ ಡಾ. ಮೋಹ್ಮದ್ ಶಫೀಯೋದ್ದಿನ್, ಮುಖ್ಯ ಆಡಳಿತಾಧಿಕಾರಿ ಪಾರ್ವತಿ ಸೇರಿದಂತೆ ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.