ಕಲಬುರಗಿ: ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಿರಿಸಿದ ಶೇ.೧೫ರಷ್ಟು ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಲಬುರಗಿ ಅಲ್ಪಸಂಖ್ಯಾತರ ಇಲಾಖೆಯ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ವಿದೇಶಿ ಅಧ್ಯಯನ ಪ್ರವಾಸ, ಅರಿವು ಯೋಜನೆ ಸೇರಿದಂತೆ ಅಲ್ಪಸಂಖ್ಯಾತರ ಯೋಜನೆಗಳ ಅನುದಾನ ಕಡಿತ ಮಾಡಿರುವುದನ್ನು ಪುನಃ ನೀಡಬೇಕು. ಜೊತೆಗೆ ಈ ಸಮುದಾಯಗಳಿಗೆ ಈಗಾಗಲೇ ನೀಡಲಾಗುವ ಅನುದಾನವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಪ್ತಪದಿ ಯೋಜನೆಯಡಿ ೭೦ ಸಾವಿರ ರೂ. ನೀಡಲಾಗುತ್ತಿದ್ದು, ಅದೇ ರೀತಿ ಶಾದಿ ಭಾಗ್ಯ ಯೋಜನೆಗೂ ಅಷ್ಟೇ ಮೊತ್ತದ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಾಗಿದೆ ಎಂದರು.
ಶೈಕ್ಷಣಿಕವಾಗಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಶೇ.೧೨ರಷ್ಟು ಶಿಕ್ಷಕರ ನೇಮಕಾತಿಯನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಅಲ್ಪಸಂಖ್ಯಾತರ ಶಾಲಾ ಕಾಲೇಜುಗಳ ಶಿಕ್ಷಕರು ಬೇಜವಾಬ್ದಾರಿಯಿಂದ ಗೈರಾಗಿದ್ದರೆ, ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯಗಳ ಕೇಂದ್ರೀಕೃತ ಸ್ಲಂಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಿರ್ಗತಿಕರಿಗೆ ವಸತಿ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ವಕ್ಫ್ಗೆ ಸೇರಿದ ೯೪ ಎಕರೆ ೧೦ ಗುಂಟೆ ಆಸ್ತಿಯನ್ನು ಮುತವಲ್ಲಿಗಳು ಮಾರಾಟ ಮಾಡಿದ್ದು, ೧೯೯೫ ವಕ್ಫ್ ಕಾಯ್ದೆ ಸೆಕ್ಷನ್ ೫೪ರಡಿ ಮತ್ತೆ ವಕ್ಫ್ ಬೋಡ್ಗೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಅದೇ ರೀತಿ ಜಿಲ್ಲೆಯಲ್ಲಿ ವಕ್ಫ್ಗೆ ಸೇರಿದ ೨೪೭ ಎಕರೆ ೨೭ ಗುಂಟೆ ಜಮೀನು ಅತಿಕ್ರಮಣವಾಗಿದ್ದು, ಈ ಒತ್ತುವರಿ ಭೂಮಿಯನ್ನು ವಶಕ್ಕೆಪಡೆಯಲಾಗುವುದು ಎಂದು ತಿಳಿಸಿದರು.
ಇನ್ನು ಕಲಬುರಗಿಯ ನಗರದ ವಿವಿಧ ಮೊಹಲ್ಲಾಗಳಲ್ಲಿ ಮೂಲ ಸೌಕರ್ಯಗಳಿಗೆ ಕೊರತೆಯಿದ್ದು, ಸಂಬಂಧಿಸಿದ ಇಲಾಖೆಯವರು ಗಮನಹರಿಸಿ ಅಭಿವೃದ್ಧಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯು ವಿವಿಧ ವೈವಿಧ್ಯತೆಯಿಂದ ಕೂಡಿದ್ದು, ರಾಜ್ಯದಲ್ಲಿ ಅತ್ಯಂತ ಸೌಹಾರ್ದತೆಯ ನಾಡು ಎಂಬ ಖ್ಯಾತಿಗೆ ಪಾತ್ರವಾಗಿದೆ. ಹೀಗಾಗಿ. ಕೋಮು ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಇಲಾಖೆಗೆ ಅಧ್ಯಕ್ಷರು ಸೂಚಿಸಿದರು.
ಈ ಸಭೆಯಲ್ಲಿ ಅಫಜಲಪೂರ ಶಾಸಕ ಎಂ.ವೈ.ಪಾಟೀಲ್, ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಮಹಮ್ಮದ್ ನಜೀರ್, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.