ಶಹಾಬಾದ: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚಿಸಿ ವೇತನ ಪರಿಷ್ಕರಿಸಿ ಜಾರಿಗೊಳಿಸಬೇಕು ಸೇರಿದಂತೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಈರಣ್ಣ ಕೆಂಭಾವಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸಭೆಯಲ್ಲಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಂತಹಂತವಾಗಿ ಸರ್ಕಾರದ ಗಮನ ಸೆಳೆಯಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.
ನವೆಂಬರನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ತಾಲೂಕು ಘಟಕಗಳಿಂದ ಸಚಿವರು, ಸಂಸದರ, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಲಾಗುವುದು. ಡಿಸೆಂಬರನಲ್ಲಿ ಏಕಕಾಲಕ್ಕೆ ಮಧ್ಯಾಹ್ನದ ಕಚೇರಿಯ ಬಿಡುವಿನ ಅವಧಿಯಲ್ಲಿ ಆಯಾ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ಜನವರಿಯಲ್ಲಿ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಲು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‍ಪಿಎಸ್) ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.
ರಾಜ್ಯದಲ್ಲಿ ಖಾಲಿ ಇರುವ 2.6 3 ಲಕ್ಷ ನೌಕರರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು. ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರು ಉಪನ್ಯಾಸಕರ ವರ್ಗಾವಣೆ ಮತ್ತು ವೃಂದ ಮತ್ತುನೇಮಕಾತಿ ನಿಯಮಗಳ ತಿದ್ದುಪಡಿ, ಪದವೀಧರ ಶಿಕ್ಷಕರು ಮುಖ್ಯ ಶಿಕ್ಷಕರ ಸಮಸ್ಯೆ ವೇತನ ತಾರತಮ್ಯ ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಬೇಕು ಎನ್ನುವುದು ಸಂಘದ ಬೇಡಿಕೆಗಳಲ್ಲಿ ಸೇರಿವೆ ಎಂದು ತಿಳಿಸಿದ್ದಾರೆ.