ಕಲಬುರಗಿ: ಗುಲಬರ್ಗಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಮಂಗಳವಾರ ಮೂವರು ಅಭ್ಯರ್ಥಿಗಳಿಂದ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆ ದಿನವಾಗಿತ್ತು. ಬಿ.ಜೆ.ಪಿ., ಕಾಂಗ್ರೇಸ್ ಹಾಗೂ ಸ್ವತಂತ್ರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರಿಗೆ ಸಲ್ಲಿಸಿದರು.
ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಗಳಂಗಪ್ಪ ಪಾಟೀಲ ಅವರು 4 ನಾಮಪತ್ರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿವಾನಂದ ಭೀಮರಾಯ ಅವರು 2 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಕೋಡ್ಲಿ ಅವರು 1 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಬುಧವಾರ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ನ.26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.