ಬೆಳಗಾವಿ: ಕಲ್ಲು ತೂರಾಟ ಘಟನೆ ಹಿನ್ನೆಲೆಯಲ್ಲಿ ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆಯನ್ನು ಡಿ.20ರವರೆಗೆ ವಿಸ್ತರಿಸಲಾಗಿದೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಶನಿವಾರ ಬೆಳಿಗ್ಗೆ ನೀಡಿದ್ದ ಪ್ರಕಟಣೆ ಪ್ರಕಾರ, ಶನಿವಾರ ಬೆಳಿಗ್ಗೆ 8ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿತ್ತು. ಆದರೆ, ಸಂಜೆ ಹೊರಡಿಸಿದ ಆದೇಶದ ಪ್ರಕಾರ ನಿಷೇಧಾಜ್ಞೆಯನ್ನು ಸೋಮವಾರ ಬೆಳಿಗ್ಗೆ 6ರವರೆಗೆ ವಿಸ್ತರಿಸಲಾಗಿದೆ.
ಸೋಮವಾರ, ವಿಧಾನಮಂಡಲ ಚಳಿಗಾಲದ ಅಧಿವೇಶನದ 6ನೇ ದಿನದ ಕಲಾಪಗಳು ನಡೆಯಲಿವೆ. ಅಂದು, ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಸುವರ್ಣ ವಿಧಾನಸೌಧಕ್ಕೆ ಕಾರ್ಯಕರ್ತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.