ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಪದ್ಧತಿ ಕೈಬಿಟ್ಟು, ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಇಲ್ಲವೆ, ನೇರ ಹಣ ಪಾವತಿ ವ್ಯವಸ್ಥೆ ಮೂಲಕ ಭರ್ತಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್.ಹನುಮಂತಪ್ಪ ಅವರು ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
2017ರಲ್ಲಿ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಪದ್ಧತಿ ಕೈಬಿಡುವಂತೆ ಆದೇಶಿಸಿದೆ. ಈಗಾಗಲೇ ರಾಜ್ಯದಲ್ಲಿ ಶೇಕಡ 98ರಷ್ಟು ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ. ಅದರೆ, ಕಲಬುರಗಿ ಮಹಾನಗರ ಪಾಲಿಕೆ ಮತ್ತು ಕೆಲ ಸ್ಥಳೀಯ ಸಂಸ್ಥೆಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಇನ್ನೂ ಗುತ್ತಿಗೆ ಪದ್ಧತಿ ಮುಂದುವರೆದಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಪಾಲಿಕೆಯ ಪೌರ ಕಾರ್ಮಿಕರ ನೇರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಆದರೆ, ನೇಮಕ ಕುರಿತಂತೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ನೇರ ನೇಮಕಾತಿ ಇನ್ನೂ ಮಾಡಲಾಗಿಲ್ಲ. ಒಮ್ಮೆ ನೇಮಕಾತಿಯಾದರೆ ಗುತ್ತಿಗೆ ಪದ್ಧತಿ ನಿವಾರಣೆಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯರಾದÀ ವಿಜಯ ಕುಮಾರ ಅಡಕಿ ಅವರು ಸಹ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಬೈರಾಮಡಗಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ 32 ತಿಂಗಳಿಂದ ವೇತನ ನೀಡುತ್ತಿಲ್ಲ ಎಂದು ಮಹಿಳಾ ಪೌರ ಕಾರ್ಮಿಕರೊಬ್ಬರು ಸಭೆಯಲ್ಲಿ ಅಲವತ್ತುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಬೈರಾಮಡಗಿ ಗ್ರಾಮ ಪಂಚಾಯಿತಿಗೆ ಒಟ್ಟು 11 ಹುದ್ದೆಗಳು ಮಂಜೂರು ಆಗಿವೆ. ಆದರೆ, ಬಹಳ ವರ್ಷಗಳ ಹಿಂದೆಯೇ 22 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಮಸ್ಯೆಯಿಂದ ಪೌರ ಕಾರ್ಮಿಕರಿಗೆ ವೇತನ ನೀಡಲಾಗುತ್ತಿಲ್ಲ ಎಂದು ವಾಸ್ತಾವಾಂಶ ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮಂದಿಯನ್ನು ನಿಯೋಜಿಸಿಕೊಂಡಿದ್ದು ಅದು ನಿಮ್ಮ ತಪ್ಪು. ಹೆಚ್ಚುವರಿಯ ಇರುವ 11 ಮಂದಿಯನ್ನು ತ್ಯಾಜ್ಯ ನಿರ್ವಹಣೆ ಘಟಕದಂತವುಗಳಿಗೆ ನಿಯೋಜಿಸುವ ಮೂಲಕ ಈ ಗೊಂದಲ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, ಒಂದು ತಿಂಗಳಲ್ಲಿ ವೇತನ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಇನ್ನು ಮಹಾನಗರ ಪಾಲಿಕೆಯ ಮಹಿಳಾ ಪೌರ ಕಾರ್ಮಿಕರಿಗೆ ಪ್ಯಾಂಟ್ ಮತ್ತು ಶರ್ಟ್‍ಗಳುಳ್ಳ ಸಮವಸ್ತ್ರ (ಯೂನಿಫಾರಂ) ನೀಡಿರುವುದಕ್ಕೆ ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಯಾವ ಜಿಲ್ಲೆಯಲ್ಲೂ ಮಹಿಳಾ ಪೌರ ಕಾರ್ಮಿಕರಿಗೆ ಈ ರೀತಿಯ ಸಮವಸ್ತ್ರ ನೀಡಿಲ್ಲ. ಇದು ಪದ್ಧತಿ ಕಲಬುರಗಿ ಪಾಲಿಕೆಯಲ್ಲಿ ಯಾಕೆ ಎಂದು ಖಾರವಾಗಿ ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಉತ್ತರಿಸಿದ ಪಾಲಿಕೆ ಇಂಜಿನಿಯರ್ ಮುನ್ನಾಫ್ ಪಟೇಲ್ ಅವರು, ಸ್ವಚ್ಛ ಭಾರತ್ ಮಿಷನ್ ಮಾರ್ಗಸೂಚಿಯಲ್ಲಿ ಪ್ಯಾಂಟ್-ಶರ್ಟ್ ಎಂದು ಇದೆ ಎಂದು ಸಮರ್ಥಿಸಿಕೊಳ್ಳಲು ಯತ್ನಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ಪುರುಷ ಪೌರ ಕಾರ್ಮಿಕರಿಗೆ ಪ್ಯಾಂಟ್ ಮತ್ತು ಶರ್ಟ್‍ಗಳ ಸಮವಸ್ತ್ರ ನೀಡಬಹುದು. ಆದರೆ, ಮಹಿಳಾ ಪೌರ ಕಾರ್ಮಿಕರು ಸೀರೆ-ರವಿಕೆಯ ಸಮವಸ್ತ್ರ ನೀಡುವಂತೆ ಸೂಚಿಸಿದರು.
ಪೌರಕಾರ್ಮಿಕರಿಗೆ 3 ಜೊತೆ ಸಮವಸ್ತ್ರ ನೀಡಬೇಕು. ಪೌರಕಾರ್ಮಿಕರ ಕುಟುಂಬಗಳಿಗೆ ಗುರುತಿನ ಚೀಟಿ ಹಾಗೂ ಆರೋಗ್ಯ ಕಾರ್ಡ್ ನೀಡಬೇಕು ಎಂದ ಅವರು, ಈಗ ನೀಡುತ್ತಿರುವ 35 ರೂಪಾಯಿ ಉಪಹಾರ ಭತ್ಯೆಯನ್ನು 50 ರೂಪಾಯಿ ಹೆಚ್ಚಿಸಿ ಗುಣಮಟ್ಟದ ಅಹಾರ ಸಿಗುವಂತೆ ಮಾಡಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕ್ಯಾವೇಂಜರ್ಸ್‍ಗಳ 196 ಜನ ಇದ್ದಾರೆ, ಮತ್ತೊಮ್ಮೆ ಅವರ ಬಗ್ಗೆ ಸಮೀಕ್ಷೆ ಮಾಡಬೇಕು. ಈ ಮೂಲಕ ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅವರಿಗೆ ಸರಕಾರದ ಸೌಲಭ್ಯ ಪಡೆಯಲು ಸಹಾಯವಾಗುತ್ತದೆ ಎಂದರು.
ಪೌರಕಾರ್ಮಿಕರಲ್ಲಿ ಹೆಚ್ಚಾಗಿ ಮಹಿಳೆಯರು ಕಾರ್ಯನಿರ್ವಹಿಸುವುದರಿಂದ ವಿಶ್ರಾಂತಿ ಗೃಹ ಇಲ್ಲದಿರುವುದು ಶೋಚನೀಯ ವಿಷಯ. ಪಾಲಿಕೆ ವ್ಯಾಪ್ತಿಯ 5 ವಾರ್ಡ್‍ಗಳಿಗೆ ಒಂದಂತೆ ವಿಶ್ರಾಂತಿ ಗೃಹ ಕಟ್ಟಿಸಬೇಕು. ಜಿಲ್ಲೆಯ ಇತರೆ ಸ್ಥಳಿಯ ಸಂಸ್ಥೆಗಳಲ್ಲಿ 8 ವಾರ್ಡ್‍ಗಳಿಗೆ ಒಂದಂತೆ ವಿಶ್ರಾಂತಿ ಗೃಹ ಕಟ್ಟಿಸಬೇಕು ಎಂದು ಅಧ್ಯಕ್ಷರು ತಿಳಿಸಿದರು.
ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾಗ ಮೃತರಾದ ಕಬೀರ್‍ದಾಸ ಮತ್ತು ಮಲ್ಲಮ್ಮ ತಂದೆ ಗಂಡ ಭಾಗಣ್ಣ ಅವರ ಕುಟುಂಬದ ತಲಾ ಓರ್ವ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಅವರು ಸೂಚಿಸಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ರಾಜ್ಯ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾದ ಶ್ರೀಮತಿ ಗೀತಾ ವಾಡೇಕರ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಮರಣ ಹೊಂದಿದ ಕಾರ್ಮಿಕರಿಗೆ ಸರಕಾರದಿಂದ ಇನ್ನೂ ಸೌಲಭ್ಯ ಸಿಕ್ಕಿಲ್ಲ ಅವರಿಗೆ ಬೇಗ ಸೌಲಭ್ಯ ದೊರೆಯಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ್ ಅವರ ನೇತೃತ್ವದಲ್ಲಿ ಅಲ್ಲಿಯ ಪೌರ ಕಾರ್ಮಿಕರು ವಿವಿಧ ಸೌಲಭ್ಯಗಳ ಕುರಿತು ನಿಗಮದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಮುತ್ತಣ್ಣ ಭಂಡಾರಿ, ಜಿಲ್ಲಾ ಸಫಾಯಿ ಕರ್ಮಚಾರಿಗಳ ಮುಖಂಡರಾದ ಅನೀಲ ಚಕ್ರ, ಅಲ್ಲಂ ಪ್ರಭು, ಶರಣು ಆತನೂರ ಮುಂತಾದವರು ವಿವಿಧ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾ ಮ್ಯಾನುಯೆಲ್ ಸ್ಕ್ಯಾವೆಂಜರ್ ಸಮೀಕ್ಷಾ ಸಮಿತಿ ಸದಸ್ಯೆ ನರ್ಮದಾ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತೆ ಮೋನಾ ರೋಟ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಬಕಷ್, ಕಲಬುರಗಿ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸತೀಶ್ ಬಳಮಕರ್, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೌರ ಕಾರ್ಮಿಕ ಮುಖಂಡರು, ಕಾರ್ಮಿಕರು ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…