ಶಹಾಪುರ: ತಾಲ್ಲೂಕಿನ ಪರಿಶಿಷ್ಟ ಜಾತಿಯವರ ಮೇಲಿನ ದೌರ್ಜನ್ಯ ಮತ್ತು ಮರ್ಕಲ್ ಗ್ರಾಮದ ಯುವಕರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ನಾಳೆ ದಲಿತಪರ ಸಂಘಟನೆಗಳ ಒಕ್ಕೂಟದಲ್ಲಿ ಬೃಹತ್ ಅರೆಬೆತ್ತಲೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತಪರ ಸಂಘಟನೆಗಳ ಒಕ್ಕೂಟದ ರಾಜ್ಯ ಉಪ ಪ್ರಧಾನ ಸಂಚಾಲಕರಾದ ನಾಗಣ್ಣ ಬಡಿಗೇರ್ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ ೧೦ :೩೦ ಕ್ಕೆ ಶಹಾಪುರದ ಹಳೆ ತಹಸಿಲ್ ಕಚೇರಿಯಿಂದ ಹೊಸ ತಹಸಿಲ್ ಕಚೇರಿಯವರೆಗೆ ಬೃಹತ್ ಅರೆಬೆತ್ತಲೆ ಪ್ರತಿಭಟನೆ ಮಾಡುವ ಮುಖಾಂತರ ಶಹಾಪುರ ತಹಶಿಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಗುವುದೆಂದು ತಿಳಿಸಿದರು.
ದಲಿತ ಯುವಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆ ನಡೆಯುತ್ತಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಅಂಬೇಡ್ಕರ್ ಅವರ ಅಭಿಮಾನಿಗಳು ದಲಿತರ ಪರ ಹೋರಾಟಗಾರರು, ಪ್ರಗತಿಪರ ಚಿಂತಕರು, ಸಂಘಟನೆಯ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.