ಕಲಬುರಗಿ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸೆಪ್ಟೆಂಬರ್ 17 ರಂದು ಶನಿವಾರ ಬೆಳಿಗ್ಗೆ 8.15 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಅಂದು ಬೆಳಿಗ್ಗೆ 8.45 ಗಂಟೆಗೆ ನಗರದ ಎಸ್.ವಿ.ಪಿ. ವೃತ್ತದಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆಯ ರೂವಾರಿಗಳಾದ ಸರ್ದಾರ ವಲ್ಲಭ್ಭಾಯ್ ಪಟೇಲ್ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9.15 ಗಂಟೆಗೆ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಪೊಲೀಸ್ ಆಯುಕ್ತಾಲಯದ ನೂತನ ಕಟ್ಟಡವನ್ನು ಉದ್ಘಾಟಿಸುವರು.
ಅಂದು ಬೆಳಿಗ್ಗೆ 11.30 ಗಂಟೆಗೆ ನಗರದ ಎನ್.ವಿ. ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಅದೇ ರೀತಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಾಕ್ಷ್ಯಚಿತ್ರ ಬಿಡುಗಡೆ, ಕಲ್ಯಾಣ ಕರ್ನಾಟಕ ಸಾಹಿತ್ಯ ಸಂಸ್ಕøತಿ ಮಾಲೆಯ ಗ್ರಂಥಗಳ ಬಿಡುಗಡೆ ಹಾಗೂ ದಿ. ಶ್ರೀ ಚಂದ್ರಶೇಖರ ಪಾಟೀಲ ಮಹಾಗಾಂವ್ ಇವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆ, ತೊಗರಿ ಅಭಿವೃದ್ಧಿ ಮಂಡಳಿಯಿಂದ ‘ಭೀಮಾ ಪಲ್ಸ್’ ಬಿಡುಗಡೆ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಿದ್ದಾರೆ.
ನಂತರ ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಸುಪರ ಮಾರ್ಕೇಟ್ನ ವಾಣಿಜ್ಯ ಕಟ್ಟಡದ ಎರಡನೇ ಮಹಡಿಯಲ್ಲಿ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯನ್ನು “ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ” ಎಂದು ಮರು ನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ಮಧ್ಯಾಹ್ನ 3.15 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.