ಕಲಬುರಗಿ: ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಹಿರಿಯ ನೇತಾರ, ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಭಾರೀ ಬಹುಮತದಿಂದ ಆಯ್ಕೆಯಾಗಿರುವುದು ಅತ್ಯಂತ ಹರ್ಷದ ಸಂಗತಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಲಬುರಗಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನೀಲೂರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಮೂಲತಃ ಜಿಲ್ಲೆಯವರಾದ ಮಲ್ಲಿಕಾರ್ಜುನ ಖರ್ಗೆಯವರು ಉನ್ನತ ಸ್ಥಾನಕ್ಕೇರಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈಗ ಕಾಂಗ್ರೆಸ್‍ನ ಎಲ್ಲ ನಾಯಕರು ಹಾಗೂ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಬಂದಂತಾಗಿದೆ. ಖರ್ಗೆಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಬಲಾಢ್ಯವಾಗಿ ಬೆಳೆಯಲಿದೆ. ಮತ್ತೊಮ್ಮೆ ಕಾಂಗ್ರೆಸ್ ಗತ ವೈಭವ ಮರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ, ಕರ್ನಾಟಕ ಸರ್ಕಾರದ ಹತ್ತು ಹಲವು ಖಾತೆಗಳನ್ನು ನಿಭಾಯಿಸಿ, ಕೇಂದ್ರ ಕಾರ್ಮಿಕ ಸಚಿವರಾಗಿ, ರೈಲ್ವೆ ಸಚಿವರಿಗಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ, ರಾಜ್ಯಸಭೆ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಿರುತ್ತಾರೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅವರನ್ನು ಎಐಸಿಸಿ ಅಧ್ಯಕ್ಷರಾಗಿ ನೇಮಕ ಮಾಡಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖಗೆರ್ಯಯವರು ಜಾತ್ಯಾತೀಯ ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಸೇವೆ ಸಲ್ಲಿಸಿರುವ ಕಾರಣ ಅವರು ಇಷ್ಟೊಂದು ಬಹುಮತದಿಂದ ಆಯ್ಕೆಯಾಗಲು ಕಾರಣವಾಗಿದೆ. ಖರ್ಗೆಯವರ ಮಾರ್ಗದರ್ಶನದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ, ಭಾರಿಸಲಿದೆ ಎಂದು ಹೇಳಿ ಮತ್ತೊಮ್ಮೆ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.