ಆರೋಗ್ಯ ಸಚಿವ ಕಾಸಿಗಾಗಿ ಪೋಸ್ಟಿಂಗ್ & ಕಾಸಿಗಾಗಿ ನೇಮಕಾತಿ: ಮಾಜಿ ಸಿಎಂ ಆಕ್ರೋಶ

ಬೆಂಗಳೂರು: ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಮತ್ತು ಸಿಬ್ಬಂದಿಯ ಕ್ರೌರ್ಯಕ್ಕೆ ಬಲಿಯಾದ ಬಾಣಂತಿ, ಆಕೆಯ ಇಬ್ಬರು ನವಜಾತ ಶಿಶುಗಳ ಧಾರುಣ ಸಾವು ವಿಚಾರದಲ್ಲಿ ಜನರ ದಾರಿ ತಪ್ಪಿಸಲೆತ್ನಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ಮುಂದುವರಿಸಿದ್ದಾರೆ.

ಅಮಾನುಷ ಸಾವುಗಳನ್ನು ಪ್ರಶ್ನಿಸಿದ ತಮ್ಮ ವಿರುದ್ಧವೇ ಲಘುವಾಗಿ ಟ್ವೀಟ್ ಮಾಡಿರುವ ಸಚಿವರ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿಗಳು, ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಸಚಿವ ಸ್ಥಾನಕ್ಕೆ ಸುಧಾಕರ್ ಅವರು ರಾಜೀನಾಮೆ ನೀಡಬೇಕು. ನೈತಿಕತೆ ಇದ್ದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಪಡಿಸಿದ್ದಾರೆ.

ಸಚಿವ ಸುಧಾಕರ್ ಅವರ ಮೇಲೆ ನೇರವಾಗಿಯೇ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ಮಾನ್ಯ ಸುಧಾಕರ್ ಅವರೇ; ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ; ತಾವು ಹೇಳಿದ್ದನ್ನು ವಿಷಯಾಂತರ ಮಾಡಲು ಯತ್ನಿಸಿದ ಸಚಿವರಿಗೆ ಚಾಟಿ ಬೀಸಿದ ಮಾಜಿ ಮುಖ್ಯಮಂತ್ರಿಗಳು; ಡಾ.ಸುಧಾಕರ್‌ ಅವರೇ; ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ; ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ಧಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆ ಎಂದು ಕಿಡಿ ಕಾರಿದ್ದಾರೆ

ತುಮಕೂರು ಆಸ್ಪತ್ರೆಯಲ್ಲಿ ನಡೆದದ್ದೇನು? ಆ ವೈದ್ಯೆ & ಸಿಬ್ಬಂದಿಯ ನಿರ್ದಯ, ಕ್ರೌರ್ಯದ ವರ್ತನೆ, ಆಕೆಯನ್ನು ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸರಿಂದ ಬೆದರಿಕೆ ಹಾಕಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಂಥ ಧಾರುಣ ಸಾವುಗಳಾದ ಮೇಲೆಯಾದರೂ ಹದಗೆಟ್ಟ ವ್ಯವಸ್ಥೆಯನ್ನು ಸರಿಪಡಿಸುವ ಬದಲು ಅದನ್ನೇ ಸಮರ್ಥಿಸಿಕೊಳ್ಳುವುದು ಎಂದರೆ ವಿಕಾರವಲ್ಲದೆ ಮತ್ತೇನು? ಜಿಲ್ಲಾಸ್ಪತ್ರೆಯಲ್ಲೇ ಇಂಥ ದುಃಸ್ಥಿತಿ ಇದ್ದರೆ ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು? ಹೇಳಿ ಸಚಿವರೇ? ಎಂದು ಪ್ರಶ್ನಿಸಿರುವ ಅವರು; ಆಸ್ಪತ್ರೆಯಿಂದ ನಿರ್ದಯವಾಗಿ ಹೊರಹಾಕಲ್ಪಟ್ಟ ಆ ತಾಯಿ, ನಾಲ್ಕು ಗೋಡೆಗಳ ನಡುವೆ ಇಡೀ ರಾತ್ರಿಯೆಲ್ಲಾ ನರಳಿ ಜೀವ ಚೆಲ್ಲಿದ್ದಾರೆ. ಜನಿಸಿದ ಕ್ಷಣದಲ್ಲೇ ಉಸಿರುಬಿಟ್ಟ ಆ ಎರಡು ಕಂದಮ್ಮಗಳ ಮರಣ ನಿಮ್ಮ ಆತಃಕರಣವನ್ನು ಕಲಕಿಲ್ಲವೇ ಸಚಿವರೇ? ಕರ್ನಾಟಕ ಕಂಡ ಅತ್ಯಂತ ಕರಾಳ ಕ್ರೌರ್ಯವಿದು. ಅದನ್ನು ನಾನು ಪ್ರಶ್ನಿಸಿದ್ದೇ ತಪ್ಪಾ? ಎಂದು ಕೇಳಿದ್ದಾರೆ.

ನನ್ನ ಸರಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ,ಇಲ್ಲಿ ನಡೆದದ್ದು ಕ್ರೌರ್ಯ. ಅದೇ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್‌ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು ಎಂದು ಸಚಿವ ಸುಧಾಕರ್ ಅವರಿಗೆ ಟಾಂಗ್ ನೀಡಿದ್ದಾರೆ.

ಕಾಸಿಗಾಗಿ ಹುದ್ದೆ; ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿ ಸಚಿವರೇ! ನಿಮ್ಮ ಪರ್ಸಂಟೇಜ್‌ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ʼಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲʼ ಸಚಿವರೇ ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವರೇ, ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ ಅಂಥ ನೈತಿಕತೆ ರಾಜ್ಯ ಬಿಜೆಪಿ ಸರಕಾರಕ್ಕೆ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿಗಳು ಕೇಳಿದ್ದಾರೆ.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420