ಸುರಪುರ: ತಾಲೂಕಿನ ಮುನೀರ್ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಶಾಲಾ ಬಾಲಕರ ಮೇಲೆ ಸಾಂಬರ್ ಚೆಲ್ಲಿದ ಘಟನೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಖಂಡನೆ ವ್ಯಕ್ತಪಡಿಸಿದರು.
ನಗರದ ತಾಲೂಕು ಪಂಚಾಯಿತಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿ ಮಾತನಾಡಿದ ಅನೇಕ ಮುಖಂಡರು,ಮುನೀರ್ ಬೊಮ್ಮನಹಳ್ಳಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮಕ್ಕಳ ಮೇಲೆ ಬಿಸಿಯೂಟದ ಸಾಂಬರ್ ಬಿದ್ದು ಅನೇಕ ವಿದ್ಯಾರ್ಥಿಗಳು ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ಸೇರಿಕೊಂಡಿದ್ದಾರೆ. ಘಟನೆ ನಡೆದು ಮೂರು ದಿನವಾದರೂ ಇದುವರೆಗೆ ಯಾವೊಬ್ಬ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದರು.
ಅಲ್ಲದೆ ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಗಾಯಗೊಂಡ ಮಕ್ಕಳ ಆಸ್ಪತ್ರೆಯ ಸಂಪೂರ್ಣ ಖರ್ಚು ಸರಕಾರವೇ ನೋಡಿಕೊಳ್ಳಬೇಕು ಇಲ್ಲವಾದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವರ್ ಅವರಿಗೆ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿದ ಇಓ ಮಾತನಾಡಿ,ನಿಮ್ಮ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ,ಡಾ:ಮಲ್ಲಿಕಾರ್ಜುನ ಆಶನಾಳ, ಮೂರ್ತಿ ಬೊಮ್ಮನಹಳ್ಳಿ,ಅಜೀಜ್ ಸಾಬ್ ಐಕೂರ,ಖಾಜಾಹುಸೇನ್ ಗುಡಗುಂಟಿ,ಜಟ್ಟೆಪ್ಪ ನಾಗರಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.