ಬೆಂಗಳೂರು; ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಕರ್ನಾಟಕ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಅವರು ಇಂದು ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್. ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂ ಕೋರ್ಟ್ ಮುಂದೆ ಅಪೀಲು ಇದ್ದು, ವಕೀಲರನ್ನು ನೇಮಿಸಲಾಗಿದೆ ಎಂದರು.
2023-24ನೇ ಶೈಕ್ಷಣಿಕ ವರ್ಷದಿಂದ ಅಖಿಲ ಭಾರತ ಕೋಟಾದಡಿಯ ಆಧಾರದ ಮೇಲೆ ಅರ್ಹರಾಗುವ ರಾಜ್ಯದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಶೇ.25 ರಷ್ಟು ರಾಜ್ಯದ ನಿವಾಸಿ ಮೀಸಲಾತಿಯನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡುವುದನ್ನು ತಪ್ಪದೇ ಜಾರಿಗೊಳಿಸುವಂತೆ ತಿಳಿಸಿ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಉಪಕುಲಪತಿಗಳಿಗೆ ಪತ್ರ ಬರೆಯಲಾಗಿದೆ ಎಂದರು.